ಅ.10: ಪುತ್ತೂರು ಬಾಲವನದಲ್ಲಿ ಡಾ.ಕಾರಂತರ ಜನ್ಮದಿನಾಚರಣೆ…..
ಪುತ್ತೂರು: ಡಾ.ಶಿವರಾಮ ಕಾರಂತರ 118ನೇ ಜನ್ಮ ದಿನೋತ್ಸವ, ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅ.10ರಂದು ಪುತ್ತೂರು ಪರ್ಲಡ್ಕದಲ್ಲಿರುವ ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಲಿದೆ ಎಂದು ಬಾಲವನ ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿಯಾದ ಪುತ್ತೂರು ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿ ಹೆಚ್.ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅ.10ರಂದು ಪೂರ್ವಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ತಾಪಂ ಅಧ್ಯಕ್ಷರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಾಧಕರಾದ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಹಾಗೂ ಬಾಲ ವಿಜ್ಞಾನಿಗಳಾದ ಅಮನ್ ಕೆ.ಎ ಮತ್ತು ನಚಿಕೇತ್ ಎ.ಯು ಅವರನ್ನು ಪುರಸ್ಕರಿಸಲಾಗುವುದು. ಬಳಿಕ ನಡೆಯಲಿರುವ ವಿಚಾರ ಗೋಷ್ಠಿಯಲ್ಲಿ `ಡಾ. ಶಿವರಾಮ ಕಾರಂತರು ಮತ್ತು ಪರಿಸರ’ ವಿಚಾರದಲ್ಲಿ ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್ ಉಪನ್ಯಾಸ ನೀಡಲಿದ್ದಾರೆ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮದ್ಯಾಹ್ನ ಬಾಲವನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ಸಾಹಿತಿ ಹಾಗೂ ಚಿಂತಕ ಜಯಂತ ಕಾಯ್ಕಿಣಿ ಅವರಿಗೆ ಬಾಲವನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರಾಜ್ಯ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಬಾಲವನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.