ಕೊರೋನ: ಸಜಿಪನಡು ಗ್ರಾಮದ ಮಗು ಆಸ್ಪತ್ರೆಯಿಂದ ಬಿಡುಗಡೆ….
ಮಂಗಳೂರು : ಕೊರೊನಾ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮದ ಹತ್ತು ತಿಂಗಳ ಗಂಡು ಮಗುವನ್ನು ಮಾ. 23ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರನೆ ದಿನ ಮಗುವಿನ ಗಂಟಲ ಸ್ರಾವವನ್ನು ಕೋವಿಡ್ – 19 ಪರೀಕ್ಷೆಗೆ ಕಳುಹಿಸಿದ್ದು ಮಾ. 26ರಂದು ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು.
10 ತಿಂಗಳ ಮಗುವಿನ ಕೊರೊನಾ ಪ್ರಕರಣವು ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿತ್ತು. ಕೇವಲ ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಕೊರೊನಾ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು. ಪುಟ್ಟ ಮಗುವಿನ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು. ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ. ಇದು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೂ ಖ್ಯಾತಿ ತಂದಿದೆ.ಅಲ್ಲದೇ, ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದ್ದು, ಇವರೂ ಕೂಡಾ ಡಿಸ್ಚಾಜ್೯ ಆಗಿದ್ದಾರೆ.