ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ…
ಚೆನ್ನೈ: ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ (74) ಅವರು ಇಂದು (ಶುಕ್ರವಾರ) ವಿಧಿವಶರಾಗಿದ್ದಾರೆ.
ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ ವರದಿ ನೆಗೆಟಿವ್ ಬಂದಿತ್ತು.ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
1946ರ ಜೂನ್ 4 ರಂದು ಜನಿಸಿದ್ದ ಎಸ್‌ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ.6 ಬಾರಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ಗಾಯನದಲ್ಲಿ ಮಾತ್ರವಲ್ಲದೇ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ಅವರು ಸಾಧನೆ ಮಾಡಿದ್ದಾರೆ.