ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಮೇ 5 ರಂದು ಜ್ಞಾನ ಸಂಗಮ 2023…
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2023ನ್ನು ಮೇ 5 ಶುಕ್ರವಾರ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್‍ಗೆ ಸಂಬಂದಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಭಾಗದಲ್ಲಿ ಹೆಚ್ಚು ಆಸಕ್ತಿಯನ್ನು ಮೂಡಿಸುವುದರ ಜತೆಯಲ್ಲಿ ಅವರನ್ನು ಉತ್ತಮ ತಂತ್ರಜ್ಞರನ್ನಾಗಿಸುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ.
ರಾಷ್ಟ್ರಾದ್ಯಂತ ವಿವಿಧ ಕಾಲೇಜುಗಳ ಇಂಜಿನಿಯರಿಂಗ್ ವಿಭಾಗದ ಸುಮಾರು 400 ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದು ವಿವಿಧ ವಿಭಾಗಗಳಲ್ಲಿ ಒಟ್ಟು 60 ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಅಲ್ಲದೆ ಪ್ರಾಜೆಕ್ಟ್ ಗಳಿಗೆ ಸಂಬಂಧಪಟ್ಟ 50 ಕ್ಕೂ ಮಿಕ್ಕಿ ಪೋಸ್ಟರ್ ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಇಲ್ಲಿ ಮಂಡಿಸಲ್ಪಡುವ ಎಲ್ಲಾ ಪ್ರೌಢ ಪ್ರಬಂಧಗಳನ್ನು ಮುದ್ರಿಸಿ ಸಂಚಿಕೆಯ ರೂಪದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು.
ಆ ದಿನ ಬೆಳಿಗ್ಗೆ 9.30ಕ್ಕೆ ನಡೆಯುವ ಉಧ್ಘಾಟನಾ ಸಮಾರಂಭದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್.ಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಶ್ರೀ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಅದೇ ದಿನ ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ಸ್ ಇಂಜಿನಿಯರಿಂಗ್ ಕಾಲೇಜಿನ ಮಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಜಯ್.ವಿ.ಎಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಅಧ್ಯಕ್ಷತೆ ವಹಿಸುತ್ತಾರೆ. ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.