ಪರಿಸರ, ವೃಕ್ಷ, ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನ: ಈಶ್ವರ ಖಂಡ್ರೆ…

ಬಂಟ್ವಾಳ, ಜು.2: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕಿನ ಆಲಂಪುರಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೆಲ, ಜಲ, ಪ್ರಾಣಿ ಮತ್ತು ವನ ಸಂರಕ್ಷಣೆಯ ಕಾರ್ಯ ನಮ್ಮ ಸಂಕಲ್ಪವಾಗಬೇಕು ಎಂದು ಹೇಳಿದರು.
ಪರಿಸರ ದಿನ, ವನಮಹೋತ್ಸವದ ದಿನದಂದು ಮಾತ್ರ ಸಸಿ ನೆಟ್ಟು, ನಮ್ಮ ಪರಿಸರ ಪ್ರೇಮ ಮೆರೆದರೆ ಸಾಲದು, ಅದು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.
ಕಳೆದ ಕೆಲವು ತಿಂಗಳುಗಳಲ್ಲಿ ಇಡೀ ಜಗತ್ತು ಬಿರು ಬಿಸಿಲಿನ ತಾಪದಿಂದ ತತ್ತರಿಸಿ ಹೋಯಿತು. ಭಾರತದಲ್ಲಿ ಈ ಬಾರಿ 40 ಸಾವಿರಕ್ಕೂ ಹೆಚ್ಚು ಜನರು ಸೌರಾಘಾತಕ್ಕೆ ಈಡಾಗಿದ್ದು, 100ಕ್ಕೂ ಹೆಚ್ಚು ಸಾವು ಸಂಭವಿಸಿವೆ. ಹಜ್ ಯಾತ್ರೆಗೆ ಹೋದ ಸಾವಿರಕ್ಕೂ ಹೆಚ್ಚು ಜನರು ಸೌರಶಾಖ ತಾಳಲಾರದೆ ನರಳಿ ಮೃತಪಟ್ಟಿದ್ದನ್ನು ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ತಾಪಮಾನ ಏರಿಕೆ ತಡೆಯಲು ವೃಕ್ಷ ಸಂರಕ್ಷಣೆಯೇ ಪರಿಹಾರ ಎಂದರು.
ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು ಹಿತಮಿತವಾಗಿ ಬಳಸುತ್ತಿದ್ದರು, ಬೆಟ್ಟ, ಗುಡ್ಡ, ನದಿ ಪೂಜಿಸುತ್ತಿದ್ದರು. ಅವರಿಗೆ ಪರಿಸರದ ಕಾಳಜಿ ಇತ್ತು. ನಾವು ಕೂಡ ಪರಿಸರ ಸಂರಕ್ಷಣೆ ಮಾಡಿ, ಇರುವುದೊಂದೇ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಅರಣ್ಯದ ಬಳಿ, ಅರಣ್ಯದಲ್ಲಿ ಪಶು ಪಕ್ಷಿಗಳಿಗೆ ಆಹಾರ ನೀಡುವ ಫಲ ನೀಡುವ ವೃಕ್ಷ ನಾಟಿ ಮಾಡುವ ಈ ಯೋಜನೆ ಫಲಪ್ರದ ಕಾರ್ಯಕ್ರಮ ಎಂದು ಬಣ್ಣಿಸಿದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸರ್ಕಾರ ತಾಲೂಕಿಗೊಂದು ಸಸ್ಯೋದ್ಯಾನ ನಿರ್ಮಿಸುತ್ತಿದ್ದು, ಎಲ್ಲ ಊರಿನಲ್ಲೂ ಶುದ್ಧ ಗಾಳಿಗೆ ಒಂದು ನಿರ್ದಿಷ್ಟ ಸ್ಥಳ ಕಾಯ್ದಿರಿಸುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, ಹೊಸ ಸಸಿ ನೆಡುವುದರ ಜೊತೆಗೆ ಇರುವ ವೃಕ್ಷಗಳ ಸಂರಕ್ಷಣೆಯನ್ನೂ ನಾವು ಮಾಡಬೇಕು. ಆಗ ಮಾತ್ರ ಹಸಿರು ಉಳಿಸಲು ಸಾಧ್ಯ ಎಂದು ಪ್ರತಿಪಾದಿಸಿದರು.
ನಂತರ ಅರಣ್ಯ ಸಚಿವ ಈಶ್ವರ ಖಂಡ್ರೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ವೀಕ್ಷಿಸಿ, ಅಲ್ಲಿರುವ ವೃಕ್ಷಗಳ ಮಾಹಿತಿ ಪಡೆದರು. ಸಸ್ಯೋದ್ಯಾನಗಳಿಗೆ ಬರುವ ಮಕ್ಕಳಿಗೆ, ಜನರಿಗೆ ಕನಿಷ್ಠ 10 ಗಿಡ ಮರಗಳನ್ನು ಗುರುತಿಸುವಂತೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಶಾಸಕ ರಾಜೇಶ್ ನಾಯಕ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್ ಮತ್ತಿತರರು ಉಪಸ್ಥಿತರಿದ್ದರು.

whatsapp image 2024 07 02 at 11.09.15 am

Sponsors

Related Articles

Back to top button