ಶಿಕ್ಷಕರು ಅಧ್ಯಯನ ಶೀಲರಾಗಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು- ಮಾಲತಿ ಕೆ…
ಬಂಟ್ವಾಳ ದ.12 :ಶಿಕ್ಷಕರು ನಿರಂತರ ಅಧ್ಯಯನ ಶೀಲರಾಗಿ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳಲ್ಲಿ ಕಲಿಕೆಯೊಂದಿಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವಲ್ಲಿ ಸಹಕರಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ಹೇಳಿದರು.
ಅವರು ಮೊಡಂಕಾಪು ದೀಪಿಕಾ ಶಾಲೆಗಳ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಮೊಡಂಕಾಪು ದೀಪಿಕಾ ಪ್ರೌಢ ಶಾಲಾ ಸಭಾಂಗಣದಲ್ಲಿ ಸಂಯೋಜಿಸಲಾಗಿತ್ತು.
ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ವಿದ್ಯಾ ಕುಮಾರಿ , ಸರಕಾರಿ ನೌಕರ ಸಂಘದ ಅಧ್ಯಕ್ಷ ಶಿವ ಪ್ರಸಾದ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಪ್ರಾಥಮಿಕ ಶಾರೀರಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ , ಚಿತ್ರ ಕಲಾ ಶಿಕ್ಷಕ ಸಂಘದ ಅಧ್ಯಕ್ಷ ಮುರಳೀಧರ ಆಚಾರ್ಯ, ಕಾರ್ಯಕ್ರಮ ನೋಡಲ್ ಅಧಿಕಾರಿ ಪ್ರತಿಮಾ, ಜಿಪಿಟಿ ಸಂಘದ ಅಧ್ಯಕ್ಷ ಗುರುರಾಜ್ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಹೆಬ್ಬಾರ್ , ಜಯಾನಂದ ಪೆರಾಜೆ, ವೆಂಕಟಕೃಷ್ಣ ಭಟ್, ವಿದ್ಯಾ ಭಟ್ , ಜಗದೀಶ್ ಹೊಳ್ಳ ತೀರ್ಪುಗಾರರಾಗಿ ಭಾಗವಹಿಸಿದ್ದರು. ಶಿಕ್ಷಣ ಸಂಯೋಜಕಿ ಸುಧಾ ಸ್ವಾಗತಿಸಿದರು. ಶಿಕ್ಷಣ ಸಂಯೋಜಕರಾದ ರಮಾನಂದ , ಸುರೇಖಾ ಯಳವಾರ ನಿರೂಪಿಸಿ ವಂದಿಸಿದರು.




