ಟಿ.ಎಂ. ಶಹೀದ್ ತೆಕ್ಕಿಲ್ ಅವರಿಗೆ 55ನೇ ಜನ್ಮದಿನದ ಸಂಭ್ರಮ…

ಡಾ. ಎಸ್. ವಿ. ಪ್ರಸಾದ್
ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಕಳೆದ ಮೂರೂವರೆ ದಶಕಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಪ್ರಭಾವಿ ನಾಯಕರು ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಸಚಿವ ಸ್ಥಾನಮಾನ ಹೊಂದಿದ ಅಧ್ಯಕ್ಷರಾದ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಜನವರಿ 21ರಂದು ತಮ್ಮ 55ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಎನ್.ಎಸ್.ಯು.ಐ ಮೂಲಕ ವಿದ್ಯಾರ್ಥಿ ರಾಜಕಾರಣಕ್ಕೆ ಕಾಲಿಟ್ಟ ಶಹೀದ್ ತೆಕ್ಕಿಲ್ ಅವರು, ಬಳಿಕ ಯೂತ್ ಕಾಂಗ್ರೆಸ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಹಾಗೂ ಕೆ.ಪಿ.ಸಿ.ಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿ, ಅರಣ್ಯ ಅಭಿವೃದ್ಧಿ ನಿಗಮ ಹಾಗೂ ಕೇಂದ್ರ ನಾರು ಮಂಡಳಿಯ ಸದಸ್ಯರಾಗಿ ಸಲ್ಲಿಸಿದ ಸೇವೆಗಳು ವಿಶೇಷವಾಗಿ ಸ್ಮರಣೀಯವಾಗಿವೆ.

ರಾಜಕೀಯಕ್ಕೆ ಮಾತ್ರ ಸೀಮಿತವಾಗದೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ ಧ್ಯೇಯದೊಂದಿಗೆ ಸಂಪಾಜೆಯ ಗೂನಡ್ಕದಲ್ಲಿ ‘ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆ’ಯನ್ನು ಸ್ಥಾಪಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಾರಿಯನ್ನು ತೆರೆದಿದ್ದಾರೆ. ಇಂದು ಸಾವಿರಾರು ವಿದ್ಯಾರ್ಥಿಗಳು ಈ ಸಂಸ್ಥೆಯ ಮೂಲಕ ಶಿಕ್ಷಣ ಪಡೆದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವುದು ಅವರ ಶೈಕ್ಷಣಿಕ ಬದ್ಧತೆಯ ಪ್ರತಿಬಿಂಬವಾಗಿದೆ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮೂಲಕ ಹಮ್ಮಿಕೊಳ್ಳುವ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ನಾಡಿನಾದ್ಯಂತ ಮೆಚ್ಚುಗೆ ಪಡೆದಿವೆ.
ಸಹಕಾರಿ ಕ್ಷೇತ್ರದಲ್ಲಿ ಸುಳ್ಯ ತಾಲೂಕು ಅಲ್ಪಸಂಖ್ಯಾತರ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ, ಧಾರ್ಮಿಕ ಕ್ಷೇತ್ರದಲ್ಲಿ ಪೇರಡ್ಕ ಮುಹಿದ್ದೀನ್ ಜುಮಾ ಮಸೀದಿಯ ಮಾರ್ಗದರ್ಶಕರಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಅಸೋಸಿಯೇಷನ್‌ನ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಹಲವಾರು ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಛಾಪು ಮೂಡಿಸಿದ್ದಾರೆ.

ಸರಳತೆ, ಸಜ್ಜನಿಕೆ ಹಾಗೂ ಬಡವರ ನೋವಿಗೆ ಸ್ಪಂದಿಸುವ ಮಾನವೀಯ ಗುಣಗಳಿಂದ ಜನಮನ ಗೆದ್ದಿರುವ ಟಿ.ಎಂ. ಶಹೀದ್ ತೆಕ್ಕಿಲ್ ಅವರಿಗೆ 55ನೇ ವಸಂತದ ಹಾರ್ದಿಕ ಶುಭಾಶಯಗಳು.

Related Articles

Back to top button