ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ “ನಶಾ ಮುಕ್ತ ಭಾರತ” ಜನಜಾಗೃತಿ ಅಭಿಯಾನ…

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ ದುರುಪಯೋಗ, ಅಕ್ರಮ ಸಾಗಣೆ ಹಾಗೂ ಅದರ ದುಷ್ಪರಿಣಾಮಗಳ ಕುರಿತು “ನಶಾ ಮುಕ್ತ ಭಾರತ” ಜನಜಾಗೃತಿ ಅಭಿಯಾನವು ಜೂ.23ರಂದು ತುಂಬೆ ಪದವಿ ಪೂರ್ವ ಕಾಲೇಜಿನ ಶಬನಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರೀ ಮಂಜುನಾಥ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಮತ್ತು ಸಮಾಜದ ಮೇಲೆ ಬೀರುವ ಗಂಭೀರ ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಯುವಜನರು ದುಶ್ಚಟಗಳಿಂದ ದೂರವಿದ್ದು ಉತ್ತಮ ಗುರಿಗಳನ್ನು ಹೊಂದಿ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಬಂಟ್ವಾಳ ಗ್ರಾಮಾಂತರ ಠಾಣೆಯ ಪರಿವೀಕ್ಷಣಾ ಅವಧಿಯ ಆರಕ್ಷಕ ಅಧಿಕಾರಿ ಶಿವರಾಮ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಅಕ್ರಮ ಸಾಗಣೆ, ಕಾನೂನು ಕ್ರಮಗಳು ಹಾಗೂ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ವಿ. ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ಉಪನ್ಯಾಸಕ ಅಬ್ದುಲ್ ರಹಿಮಾನ್ ಡಿ. ಬಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಕವಿತಾ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಬೇಬಿ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನಶಾ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಕೈಗೊಂಡರು.



