ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಡಾ.ಗಿರೀಶ್ ಭಾರದ್ವಾಜ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತಾಂತ್ರಿಕ ಸಲಹಾ ಸಮಿತಿಯಲ್ಲಿ ಹತ್ತು ವರ್ಷಗಳ ಕಾಲ ನಿರ್ದೇಶಕರಾಗಿದ್ದ ತೂಗುಸೇತುವೆಯ ಸರದಾರ, ಬ್ರಿಜ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನ ಹೊಂದಿದರು.
ದೇಶಾದ್ಯಂತ ಸುಮಾರು 160ಕ್ಕೂ ಮಿಕ್ಕಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ನದಿ, ಕೊಳ, ಹಳ್ಳಗಳಿಂದಾಗಿ ಮುಖ್ಯವಾಹಿನಿಯೊಂದಿಗೆ ಸಂಪರ್ಕ ಕಳೆದುಕೊಂಡಿರುವ ಜನರಿಗೆ ಇವರು ಆಶಾಕಿರಣರಾಗಿದ್ದರು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರಗಳಿಗೂ ತಮ್ಮ ಸೇವಾ ವ್ಯಾಪ್ತಿಯನ್ನು ವಿಸ್ತರಿಸಿದ್ದು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಕಡಿಮೆ ವೆಚ್ಚದಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುತ್ತಿದ್ದುದು ವಿಶೇಷವಾಗಿತ್ತು. ಇವರ ಸಾಧನೆಗೆ 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಇವರು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸದಾ ಸ್ಪೂರ್ಥಿಯ ಸೆಲೆಯಾಗಿದ್ದರು.
ಅಗಲಿದ ಈ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಭಾವಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



