ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಖಾಕಿ ದರ್ಪ-ಮೋದಿ, ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ವಿರುದ್ಧ ಟಿ.ಎಂ. ಶಾಹೀದ್ ತೆಕ್ಕಿಲ್ ತೀವ್ರ ಆಕ್ರೋಶ…

ಬೆಂಗಳೂರು:ನವದೆಹಲಿಯಲ್ಲಿ ಶಿಕ್ಷಣ ವ್ಯವಸ್ಥೆಯ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ಯುವಕರು ಹಮ್ಮಿಕೊಂಡಿದ್ದ ‘ಸಂಸತ್ ಚಲೋ’ ಪ್ರತಿಭಟನಾ ಮೆರವಣಿಗೆಯ ಮೇಲೆ ಪೊಲೀಸರು ನಡೆಸಿದ ಅಮಾನವೀಯ ಲಾಠಿ ಚಾರ್ಜ್ ಅನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸಿ ಶಾಂತಿಯುತವಾಗಿ ಸಂಸತ್ತಿನತ್ತ ಸಾಗುತ್ತಿದ್ದ ಯುವಕರ ಮೇಲೆ ದೌರ್ಜನ್ಯವೆಸಗಿರುವುದು ತೀರಾ ಖಂಡನೀಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಒಟ್ಟಾರೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಶಾಹೀದ್ ತೆಕ್ಕಿಲ್, ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸ್ ಬಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವರ ಇಂತಹ ದಮನಕಾರಿ ನೀತಿಗಳು ದೇಶದ ಪ್ರಜಾಪ್ರಭುತ್ವಕ್ಕೆ ದೊಡ್ಡ ಮಾರಕವಾಗಿವೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿನ ನಿರಂತರ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ಮೇಲಿನ ಈ ಪೊಲೀಸ್ ದೌರ್ಜನ್ಯಕ್ಕೆ ನೇರ ಹಾಗೂ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಈ ಘಟನೆಯನ್ನು ಕರ್ನಾಟಕದ ಇತರೆ ವಿರೋಧ ಪಕ್ಷದ ನಾಯಕರು, ಮುಖಂಡರು ಮತ್ತು ವಿವಿಧ ವಿದ್ಯಾರ್ಥಿ ಸಂಘಟನೆಗಳು ಕೂಡ ಒಕ್ಕೊರಲಿನಿಂದ ಖಂಡಿಸಿದ್ದು, ಕೇಂದ್ರ ಸರ್ಕಾರದ ದಮನಕಾರಿ ನೀತಿಯ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ ಎಂದವರು ಹೇಳಿದ್ದಾರೆ.




