ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ದೇವರಲ್ಲಿ ಲೀನ….
ಉಡುಪಿ : ಉಡುಪಿ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಯತಿ ಪರಂಪರೆಯಲ್ಲಿ 32ನೇ ಪೀಠಾಧಿಪತಿಗಳಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು(88 ) ಇಂದು ದೇವರಲ್ಲಿ ಲೀನವಾಗಿದ್ದಾರೆ.
ನ್ಯುಮೋನಿಯಾ ಸಮಸ್ಯೆಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತಿದ್ದರು. ಕಳೆದ ಎಂಟು ದಿನಗಳ ನಡುವೆ ಆರೋಗ್ಯ ತುಸು ಚೇತರಿಕೆ ಕಂಡಿದ್ದರೂ ಕೃತಕ ಉಸಿರಾಟ ಮೂಲಕ ಗಂಭೀರ ಸ್ಥಿತಿಯಲ್ಲೆ ಚಿಕಿತ್ಸೆ ಮುಂದುವರೆಸಲಾಗಿತ್ತು.
ಆದರೆ, ಶುಕ್ರವಾರ ಮತ್ತು ಶನಿವಾರ ಶ್ರೀಗಳ ದೇಹ ಸ್ಥಿತಿ ಚಿಂತಾಜನಕವಾಗಿತ್ತು. ಶನಿವಾರ ಸಾಯಂಕಾಲ ಮಿದುಳು ಸರಿಯಾಗಿ ಕಾರ್ಯನಿರ್ವಹಿಸದ ಬಗ್ಗೆ ವೈದ್ಯರು ತಿಳಿಸಿದ್ದರು. ಪೇಜಾವರ ಕಿರಿಯ ಶ್ರೀಗಳು ಗುರುಗಳ ಆರೋಗ್ಯ ಸುಧಾರಣೆ ಕಂಡಿಲ್ಲ. ಅವರ ಇಚ್ಛೆಯಂತೆ ಮಠಕ್ಕೆ ಕರೆದುಕೊಂಡು ಹೋಗುವುದಾಗಿ ಶನಿವಾರ ತಿಳಿಸಿದ್ದರು.
ಇದೀಗ ಉಡುಪಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಮಧ್ಯಾಹ್ನದ ವೇಳೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶರೀರವನ್ನು ಕೊಂಡೊಯ್ದು ಸಾರ್ವಜನಿಕರಿಗೆ ಅಂತಿಮ ದರ್ಶನವನ್ನು ಕಲ್ಪಿಸಲಾಗುತ್ತದೆ. ನಂತರ ವಿದ್ಯಾಪೀಠದಲ್ಲಿ ಬೃಂದಾವನಸ್ಥರಾಗಲಿದ್ದಾರೆ.
ಪುತ್ತೂರು ತಾಲೂಕಿನ ರಾಮಕುಂಜದಲ್ಲಿ 1931 ಎಪ್ರಿಲ್ 27 ರಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರು ಜನಿಸಿದರು. ತಂದೆ ನಾರಾಯಣಾಚಾರ್ಯ, ತಾಯಿ ಕಮಲಮ್ಮ. ವೆಂಕಟ್ರಮಣ ಎಂಬ ಹೆಸರಿನ ಅವರು ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸದ ಬಳಿಕ ಆಧ್ಯಾತ್ಮದ ಕಡೆಗೆ ಒಲವು ತೋರಿದರು. 7 ವರ್ಷದ ಬಾಲಕ ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ, ಪೇಜಾವರ ಮಠದ ಪರಂಪರೆಯ 32ನೆಯ ಯತಿಯಾಗಿ, 1938 ರ ಡಿ.3 ರಂದು ಆಚಾರ್ಯ ಮಧ್ವರ ವೇದಾಂತ ಪೀಠವನ್ನೇರಿದರು. ಆ ಬಳಿಕ ‘ವಿಶ್ವೇಶ ತೀರ್ಥ’ರಾದರು. 1952 ಜನವರಿ 18 ರಂದು, 21ರ ಹರೆಯದಲ್ಲಿ ಮೊದಲ ಪರ್ಯಾಯ ಪೀಠಾರೋಹಣ ಮಾಡಿದರು.