ಮಂಗಳೂರು ಗೋಲಿಬಾರ್ – ಮ್ಯಾಜಿಸ್ಟೀರಿಯಲ್ ತನಿಖೆ ಪ್ರಾರಂಭ ….
ಮಂಗಳೂರು : ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಗೋಲಿಬಾರ್ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಇಂದು ಆರಂಭಿಸಿದ್ದಾರೆ.
ಇಂದು ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ನೆಲ್ಲಿಕಾಯಿ ರಸ್ತೆ, ಸ್ಟೇಟ್ ಬ್ಯಾಂಕ್ ಪರಿಸರ ಹಾಗೂ ಸಿಟಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳೂರಿನಲ್ಲಿ ಡಿ.19ರಂದು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಲಾಗಿದ್ದು, ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಯನ್ನಾಗಿ ನೇಮಿಸಿ, ವಿಚಾರಣೆ ನಡೆಸಲು ಆದೇಶ ನೀಡಿತ್ತು. 3 ತಿಂಗಳೊಳಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ಪೂರ್ಣಗೊಳಿಸಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.