ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ….
ಪುತ್ತೂರು: ವಿದ್ಯಾಸಂಸ್ಥೆ, ವಿದ್ಯಾರ್ಥಿಗಳು ಮತ್ತು ಅಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು ಇವರ ನಡುವಿನ ಬಾಂಧವ್ಯ ಉತ್ತಮವಾಗಿದ್ದರೆ ಇದು ಕಾಲೇಜಿನ ಮತ್ತು ಸಮಾಜದ ಬೆಳವಣಿಗೆಗೆ ಪೂರಕ ಎಂದು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ.ಸತೀಶ್ ರಾವ್ ಪಿ ಹೇಳಿದರು.
ಅವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತಾಡಿದರು. ಜಗತ್ತಿನಲ್ಲಿ ಅಭಿವೃದ್ದಿ ಹೊಂದಿದ ತಂತ್ರಜ್ಞಾನಗಳು ನೇರವಾಗಿ ಉದ್ಯಮ ಕ್ಷೇತ್ರವನ್ನು ತಲಪುತ್ತದೆ. ಆ ತಂತ್ರಜ್ಞಾನವನ್ನು ಪ್ರಸಕ್ತ ವಿದ್ಯಾರ್ಥಿಗಳಿಗೆ ತಲಪುವಂತೆ ಮಾಡುವ ಮಹತ್ತರ ಜವಾಬ್ಧಾರಿ ಹಿರಿಯ ವಿದ್ಯಾರ್ಥಿಗಳ ಮೇಲಿದೆ ಎಂದು ಅವರು ನುಡಿದರು. ಹಿರಿಯ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸುವುದಕ್ಕಾಗಿ ಇಂತಹ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂಬಂಧ ಬೆಳೆಸುವ ನಿಟ್ಟಿನಲ್ಲಿ ಪ್ರತಿವರ್ಷ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಏರ್ಪಡಿಸಲಾಗುತ್ತದೆ. ಅದಕ್ಕೆ ಪೂರ್ವಭಾವಿಯಾಗಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಿರಿಯ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಹಾಗೂ ಅವರಿಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ಉತ್ಸುಕರಾಗಬೇಕು ಎಂದು ನುಡಿದರು.
ಹಿರಿಯ ವಿದ್ಯಾರ್ಥಿ ಸಂಘದ ಪುತ್ತೂರು ವಿಭಾಗದ ಅಧ್ಯಕ್ಷ ನರಸಿಂಹ ಪೈ, ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಪ್ರೊ.ವಿನಯ್.ಪಿ ಸ್ವಾಗತಿಸಿ, ಪ್ರೊ.ಅಕ್ಷಯ್ ಕುಮಾರ್ ವಂದಿಸಿದರು. ಪ್ರೊ.ರೇಶ್ಮಾ ಪೈ ಕಾರ್ಯಕ್ರಮ ನಿರ್ವಹಿಸಿದರು.