ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಕಡಿವಾಣ – ಸುತ್ತೋಲೆ ಹೊರಡಿಸಿದ ರಾಜ್ಯ ವಕ್ಫ್‌ ಬೋರ್ಡ್‌…

ಬೆಂಗಳೂರು: ವಕ್ಫ್‌ ಬೋರ್ಡ್ ಅಡಿಯಲ್ಲಿ ನೋಂದಣಿಯಾಗಿರುವ ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಸದಂತೆ ರಾಜ್ಯ ವಕ್ಫ್‌ ಬೋರ್ಡ್ ಸುತ್ತೋಲೆ ಹೊರಡಿಸಿದೆ.
ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಕಳೆದ ಡಿ.19ರಂದು ರಾಜ್ಯ ವಕ್ಫ್‌ ಬೋರ್ಡ್ ಸಭೆ ನಡೆಸಿತ್ತು. ಎಲ್ಲಾ ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಮಹತ್ವದ ಸುತ್ತೋಲೆ ಹೊರಡಿಸಿರುವ ರಾಜ್ಯ ವಕ್ಫ್‌ ಬೋರ್ಡ್, ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ಸೂಚಿಸಿದೆ. ಆದರೆ, ಅಝಾನ್‌ಗೆ ಯಾವುದೇ ನಿರ್ಬಂಧ ಇಲ್ಲ ಎಂದು ತಿಳಿಸಿದೆ.
‘ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲ. ಸುತ್ತೋಲೆಯ ಕ್ರಮ ಸಂಖ್ಯೆ ಮೂರರಲ್ಲಿ ಸ್ಪಷ್ಟವಾಗಿ ಅಝಾನ್ ಮತ್ತು ಇತರ ಯಾವ ವಿಚಾರಗಳಿಗೆ ಧ್ವನಿವರ್ಧಕ ಬಳಸಬಹುದೆಂದು ಸ್ಪಷ್ಟಪಡಿಸಲಾಗಿರುತ್ತದೆ. 10-07-2017 ರಂದು ಆಗಿನ ವಕ್ಫ್ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾ ಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ. ನಿರ್ಣಯದಲ್ಲಿ ಯಾವುದೇ ಲೋಪದೋಷಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು ಎಂದು ರಾಜ್ಯ ವಕ್ಫ್‌ ಬೋರ್ಡ್‌ ಸದಸ್ಯ ಮತ್ತು ಕರ್ನಾಟಕ ಮುಸ್ಲಿಂ ಜಮಾತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಾಫಿ ಸಾದಿ ಅವರು ಹೇಳಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button