ದ.ಕ. ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಸೋಂಕು ದೃಢ….
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗುತ್ತಿದೆ.
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಈತ ಮಾರ್ಚ್ 21ರಂದು ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಕೆ.ಎಸ್. ಆರ್.ಟಿ.ಸಿ. ಬಸ್ ಮೂಲಕ ಆಗಮಿಸಿದ್ದ. ಊರಿಗೆ ಬಂದಿದ್ದ ಆತನಲ್ಲಿ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಾರ್ಚ್ 24ರಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಾ ವರದಿ ಮಾರ್ಚ್ 27ರಂದು ಲಭ್ಯವಾಗಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದಾಗಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಇನ್ನು ಸೋಂಕಿತ ವ್ಯಕ್ತಿಯ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾದಲ್ಲಿರಿಸಲಾಗಿದೆ. ಆತನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಬಂಟ್ವಾಳದ ಸಜಿಪನಡು ಗ್ರಾಮದ 10 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಶಂಕಿತ ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಬುಧವಾರ ಪರೀಕ್ಷೆ ರವಾನಿಸಲಾಗಿತ್ತು. ಗುರುವಾರ ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಮಗುವಿನಲ್ಲಿ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ಸಂಪರ್ಕದಲ್ಲಿ ಇದ್ದ ಆರು ಮಂದಿಯನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಮಗುವಿನ ಸ್ವ್ಕಾಬ್ ಮತ್ತು ರಕ್ತದ ಮಾದರಿ ಮತ್ತೆ ಮರು ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಸಜಿಪನಡು ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದೆ.