ಅಗತ್ಯವೆನಿಸಿದರೆ ಕಠಿಣ ಕ್ರಮ- ಕೋಟ ಶ್ರೀನಿವಾಸ ಪೂಜಾರಿ …..
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಅಗತ್ಯವಾದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಕಸಬಾ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೋರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯ 213 ಮನೆಗಳಲ್ಲಿ ಪ್ರತಿನಿತ್ಯ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಭೇಟಿಕೊಟ್ಟು ವರದಿ ನೀಡಬೇಕು. ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಅಧಿಕಾರಿಗಳು ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು, ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ತಕ್ಷಣ ಪರಿಹರಿಸಬೇಕು. ಆಹಾರಗಳ ಪೂರೈಕೆ ಸೇರಿದಂತೆ ಸ್ಥಳೀಯ ಶಾಸಕರಿಗೆ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ತಹಶೀಲ್ದಾರ್ ರಶ್ಮಿ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.