ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ…
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದೊಂದು ಹುಸಿ ಕರೆ, ಆದರೂ ತಪಾಸಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಿಗೆ ಈ ಬೆದರಿಕೆ ಬಂದಿದೆ. ಇವರು ತಕ್ಷಣ ವಿಮಾನ ನಿಲ್ದಾಣದ ಭದ್ರತಾ ಮಂಡಳಿಗೆ ಮಾಹಿತಿ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣವನ್ನು ಸಂಪೂರ್ಣ ತಪಾಸಣೆ ಮಾಡಲಾಗಿದ್ದು, ಈ ವೇಳೆ ಯಾವುದೇ ಶಂಕಿತ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಹೆಚ್ಚಿಸಲಾಗಿದ್ದು, ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕಾರ್ಕಳ ವ್ಯಾಪ್ತಿಯ ಲೊಕೇಶನ್‌ನಿಂದ ಈ ಬೆದರಿಕೆ ಕರೆ ಬಂದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಹಿಂದೆ ಆದಿತ್ಯ ರಾವ್ ಎಂಬಾತ ಬಾಂಬ್ ಮಾದರಿಯ ವಸ್ತುವನ್ನಿಟ್ಟು ಆತಂಕ ಸೃಷ್ಟಿಸಿದ್ದ.