ಅದಾಯಕ್ಕಿಂತ ಹೆಚ್ಚಿನ ಆಸ್ತಿ- ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿಗೆ ಶಿಕ್ಷೆ….
ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪಡೆಯ ನಿರೀಕ್ಷಕ ಗಂಗಿರೆಡ್ಡಿಯನ್ನು ಗುರುವಾರ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಇನ್‌ಸ್ಪೆಕ್ಟರ್ ಗಂಗಿರೆಡ್ಡಿಗೆ 4 ವರ್ಷ ಸಾದಾ ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ. ಅದರಂತೆ ಪೊಲೀಸರು ಗಂಗಿರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಸರಿಯಾಗಿ 11 ವರ್ಷಗಳ ಹಿಂದೆ ಅಂದರೆ 2009ರ ಆ. 27ರಂದು ಗಂಗಿರೆಡ್ಡಿ ಬೆಳ್ತಂಗಡಿಯ ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಸಂದರ್ಭ ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯವನ್ನು ಮೀರಿ ಹೆಚ್ಚಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಡಿವೈಎಸ್ಪಿ ಸದಾನಂದ ವರ್ಣೇಕರ್ ಮತ್ತವರ ತಂಡವು ದಾಳಿ ನಡೆಸಿ ಪ್ರಕರಣ ದಾಖಲಿಸಿತ್ತು. ಅಲ್ಲದೆ 19 ಲಕ್ಷ ರೂ. ಮೊತ್ತದ ಆಸ್ತಿ ಪತ್ತೆಯಾದ ಬಗ್ಗೆ ವರದಿ ಮಾಡಿತ್ತು. ಬಳಿಕ ಡಿವೈಎಸ್ಪಿ ಎಂ.ವಿಠಲದಾಸ್ ಅವರು ಇನ್‌ಸ್ಪೆಕ್ಟರ್ ಗಂಗಿರೆಡ್ಡಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸರಕಾರದ ಪರವಾಗಿ 22 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್.ರಾಜೇಶ್‌ರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 13 (1) (ಇ) ರ ಅಡಿ ಆರೋಪಿ ಗಂಗಿರೆಡ್ಡಿ ಅಪರಾಧ ಎಸಗಿದ್ದಾರೆಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.