ಮಂಗಳೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಅತಿಥೇಯ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 13 ತಂಡಗಳು ಇದರಲ್ಲಿ ಭಾಗವಹಿಸಿದ್ದವು. ಜಿದ್ದಾಜಿದ್ದಿನ ಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ತಂಡವನ್ನು 33-31 ಅಂಕಗಳಿಂದ ಸೋಲಿಸಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ವಿಜಯಿಯಾಯಿತು. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹಾಗೂ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಬಹುಮಾನ ವಿತರಿಸಿದರು.
ಅಂದು ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಪಂದ್ಯಾಟಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಬಡ್ಡಿಯು ದೈಹಿಕ ಹಾಗೂ ಮಾನಸಿಕ ದೃಡತೆಗಳೆರಡನ್ನೂ ಬಯಸುವ ಕ್ರೀಡೆ. ಎದುರಾಳಿಯ ಅಂಕಣವನ್ನು ಪ್ರವೇಶಿಸಿ ಅಂಕಗಳನ್ನು ಸೂರೆಗೊಳ್ಳುವುದಕ್ಕೆ ಮಾನಸಿಕ ಜಾಣ್ಮೆ ಅತೀ ಅಗತ್ಯ ಎಂದರು. ಪಠ್ಯೇತರ ಚಟುವಟಿಕೆಗಳಿಗೆ ಕಾಲೇಜು ಸಾಕಷ್ಟು ಪ್ರೋತ್ಸಾಹವನ್ನು ನೀಡುತ್ತಿದ್ದು ಇದರ ಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಥಿಂಕ್ ಎಂಡ್ ಲರ್ನ್ ಇದರ ಮುಖ್ಯಸ್ಥ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪೂರ್ವ ವಿದ್ಯಾರ್ಥಿ ವಿಶಾಂತ್ ರೈ ಮತ್ತು ಭಾಗ್ಮನೆ ಡೆವೆಲಪರ್ಸ್ ಬೆಂಗಳೂರು ಇದರ ಅಧಿಕಾರಿ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪೂರ್ವ ವಿದ್ಯಾರ್ಥಿ ಅಭಿಷೇಕ್.ಕೆ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗೆ ನಡೆದ 23ರ ಹರೆಯದೊಳಗಿನ ವಿಭಾಗದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ರಜತ ಪದಕವನ್ನು ಗೆದ್ದ ಕಾಲೇಜಿನ ಹೆಮ್ಮೆಯ ಕ್ರೀಡಾಪಟು ಪವಿತ್ರ.ಜಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿಜೇತ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದರು. ಈ ತಂಡವು ತುಮಕೂರಿನ ಗುಬ್ಬಿ ಚೆನ್ನೆಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯುವ ರಾಜ್ಯಮಟ್ಟದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲಿದೆ.

Sponsors

Related Articles

Back to top button