ಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘ – ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್‍ನಾರಾಯಣ್ ಭೇಟಿ…

ಪುತ್ತೂರು: ರಾಜ್ಯದಲ್ಲಿ ಉದ್ಯೋಗಗಳ ಕೊರತೆ ಇಲ್ಲ ಬದಲಾಗಿ ಉದ್ಯೋಗಕ್ಕೆ ಅಗತ್ಯವಾದ ತಾಂತ್ರಿಕ ಕೌಶಲ್ಯವುಳ್ಳ ಅಭ್ಯರ್ಥಿಗಳ ಕೊರತೆ ಕಾಡುತ್ತಿದೆ ಎಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್‍ನಾರಾಯಣ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ಉನ್ನತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇಂದು ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳಾಗುತ್ತಿದೆ. ನುರಿತ ತಂತ್ರಜ್ಞರ ಕೊರತೆಯನ್ನು ನೀಗಿಸುವುದಕ್ಕಾಗಿ ಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ. ಪ್ರಾಥಮಿಕ ಹಂತದಿಂದಲೇ ತಂತ್ರಜ್ಞಾನ ಆಧರಿತ ಶಿಕ್ಷಣ ಪದ್ದತಿಯನ್ನು ಅಳವಡಿಕೊಂಡರೆ ಮಾತ್ರ ಆಮೂಲಾಗ್ರ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಲಾಗುವುದು. ಶಿಕ್ಷಣ ಪಡೆದವರಿಗೆ ಸರಿಯಾದ ಉದ್ಯೋಗ ಪಡೆಯುವ ಮಾಹಿತಿಯ ಕೊರತೆಯಿರುತ್ತದೆ, ಅರ್ಹತೆ ಕೌಶಲ್ಯದ ಬಗೆಗೆ ತಿಳುವಳಿಕೆ ನೀಡುವ ಪ್ರತ್ಯೇಕ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದವರು ಹೇಳಿದರು.
ವಿವೇಕಾನಂದ ಸಂಸ್ಥೆಗಳ ಮೇಲೆ ಅಭಿಮಾನವಿಟ್ಟು ಆಗಮಿಸಿದ ಮಂತ್ರಿಗಳನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಗೌರವಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಪುತ್ತೂರಿನ ಶಾಸಕ ಸಂಜೀವ ಮಠಂದೂರು, ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಕಾರ್ಯದರ್ಶಿ ಡಾ.ಜಯಕರ ಶೆಟ್ಟಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಜೆನಿಫರ್ ಲೋಲಿಟಾ, ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಸಹಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ ಅಚ್ಯುತ ನಾಯಕ್ ವಂದಿಸಿದರು. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹರಿಪ್ರಸಾದ್ ದೈಲಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Back to top button